ಧರ್ಮಸ್ಥಳ : ಕಾರ್ತಿಕ ಮಾಸದಲ್ಲಿ ನಡೆಯುವ ಶ್ರೀಮಂಜುನಾಥ ಸ್ವಾಮಿಯ ಲಕ್ಷ ದೀಪೋತ್ಸವ ಗುರುವಾರದಿಂದ ಆರಂಭ ಗೊಳ್ಳಲಿದೆ. ಡಿ. 13 ಮತ್ತು 14 ರಂದು 88ನೇ ವರ್ಷದ ಸರ್ವಧರ್ಮ ಸಮ್ಮೇಳನ ಹಾಗೂ ಸಾಹಿತ್ಯ ಸಮ್ಮೇಳನ ನಡೆಯಲಿದೆ.
ಈ ಬಾರಿ ಸರಕಾರದ ಎಲ್ಲಾ ನಿಯಮಗಳನ್ನು ಪಾಲಿಸಿಕೊಂಡು ಸರಳ ಕಾರ್ಯಕ್ರಮ ನಡೆಯಲಿದ್ದು, ಡಿ. 10ರಂದು ಶ್ರೀ ಮಂಜುನಾಥ ಸ್ವಾಮಿಯ ಹೊಸಕಟ್ಟೆ ಉತ್ಸವದೊಂದಿಗೆ ಲಕ್ಷದೀಪೋತ್ಸವ ಆರಂಭಗೊಂಡು, ಡಿ.14ರಂದು ಗೌರಿಮಾರುಕಟ್ಟೆ ಉತ್ಸವದೊಂದಿಗೆ ಸಂಪನ್ನಗೊಳ್ಳಲಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷ ದೀಪೋತ್ಸವದ ಯಶಸ್ವಿ ಕಾರ್ಯಕ್ರಮಕ್ಕೆ ಕ್ಷೇತ್ರದಿಂದ ಸಮಿತಿಗಳನ್ನು ರಚಿಸಲಾಗಿದ್ದು, ಸಕಲ ಸಿದ್ದತೆಗಳನ್ನು ನಡೆಸಲಾಗಿದೆ. ದೇವರು ಸವಾರಿ ಮಾಡುವ ರಥ ಬೀದಿ, ರಾಜ ಬೀದಿಗಳನ್ನು, ದೇವಸ್ಥಾನ, ಬೀಡು, ಅನ್ನಪೂರ್ಣ ಸೇರಿದಂತೆ ಕ್ಷೇತ್ರದಲ್ಲಿ ವಿದ್ಯುದ್ದೀಪಗಳಿಂದ ಅಲಂಕೃತಗೊಳಿಸಲಾಗಿದೆ.
ಕ್ಷೇತ್ರದಲ್ಲಿ ಕೊರೋನಾ ಹಿನ್ನಲೆಯಲ್ಲಿ ಭಕ್ತರ ಸುರಕ್ಷತೆಗೆ ಆದ್ಯತೆ ನೀಡಲಾಗಿದೆ. ಕ್ಷೇತ್ರದಿಂದಲೂ ಸುರಕ್ಷತೆಯ ನಿಟ್ಟಿನಲ್ಲಿ ಸ್ಯಾನಿಟೈಸರ್ ಸಿಂಪಡಣೆ ಮಾಡಲಾಗುತ್ತಿದೆ. ಕ್ಷೇತ್ರಕ್ಕೆ ಬರುವ ಭಕ್ತರು ಮಾಸ್ಕ್ ಕಡ್ಡಾಯ ಧಾರಣೆ ಮಾಡಬೇಕು ಸುರಕ್ಷತೆಯ ದೃಷ್ಟಿಯಿಂದ ಕ್ಷೇತ್ರದಿಂದ ವಿನಂತಿಯಾಗಿದೆ. ವಸ್ತು ಪ್ರದರ್ಶನ ಹಾಗೂ ಬೀದಿ ಬದಿಯ ಅಂಗಡಿಗಳು ಇರುವುದಿಲ್ಲ. ಸರಕಾರದ ನಿಯಮದಂತೆ ಅಗತ್ಯ ಕ್ರಮಗಳೊಂದಿಗೆ ದೀಪೋತ್ಸವ ಸರಳವಾಗಿ ಆಚರಣೆಗೊಳ್ಳಲಿದೆ. ಈ ಪ್ರಯುಕ್ತ ಶ್ರೀಕ್ಷೇತ್ರದಲ್ಲಿ ನಡೆಯುವ ಎಲ್ಲಾ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಗಳನ್ನು ಮನೆಯಲ್ಲೇ ಕುಳಿತು ಆನ್‌ಲೈನ್ ಮೂಲಕ ವೀಕ್ಷಣೆ ಮಾಡಲು ಅವಕಾಶವಿದೆ.
ಶ್ರೀಕ್ಷೇತ್ರ ಧರ್ಮಸ್ಥಳ ಲಕ್ಷ ದೀಪೋತ್ಸವ ಪಾದಯಾತ್ರಿ ಸಮಿತಿ ವತಿಯಿಂದ ಗುರುವಾರ ಸಂಜೆ ಉಜಿರೆಯಿಂದ ಧರ್ಮಸ್ಥಳದ ವರೆಗೆ 8 ನೇ ವರ್ಷದ ಪಾದಯಾತ್ರೆ ನಡೆಯಲಿದೆ. ಕೋವಿಡ್ ಹಿನ್ನೆಲೆಯಲ್ಲಿ ಭಾಗವಹಿಸುವ ಪಾದಯಾತ್ರಿಗಳು ಸರಕಾರದ ಎಲ್ಲಾ ನಿಯಮಗಳನ್ನು ಕಡ್ಡಾಯ ವಾಗಿ ಪಾಲಿಸಬೇಕು ಎಂದು ಪಾದಯಾತ್ರಿ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.