ಬಂಟ್ವಾಳ : ಬಂಟ್ವಾಳ ಪುರಸಭೆಯ ಅಧ್ಯಕ್ಷ, ಉಪಾಧ್ಯಕ್ಷೆ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಅಧ್ಯಕ್ಷರಾಗಿ ಕಾಂಗ್ರೆಸ್ ಸದಸ್ಯ ಮುಹಮ್ಮದ್ ಶರೀಫ್, ಉಪಾಧ್ಯಕ್ಷೆಯಾಗಿ ಕಾಂಗ್ರೆಸ್ ಸದಸ್ಯೆ ಜೆಸಿಂತಾ ಡಿಸೋಜ ಆಯ್ಕೆಯಾಗಿದ್ದಾರೆ.
ಬೆಳಗ್ಗೆ 10:30ಕ್ಕೆ ನಾಮಪತ್ರ ಸಲ್ಲಿಸಲು ಕೊನೆಯ ಸಮಯವಾಗಿದ್ದು 12:30 ನಾಮಪತ್ರ ವಾಪಸ್ ಪಡೆಯಲು ಕೊನೆಯ ಸಮಯವಾಗಿತ್ತು. ಕೊನೆ ಗಳಿಗೆಯಲ್ಲಿ ಕಾಂಗ್ರೆಸ್ ಗೆ ಬೆಂಬಲವಾಗಿ ಎಸ್.ಡಿ.ಪಿ.ಐ. ಅಭ್ಯರ್ಥಿ ಮುನೀಶ್ ಅಲಿ ನಾಮಪತ್ರ ವಾಪಸ್ ಪಡೆದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳ ನಡುವೆ ಸ್ಪರ್ಧೆ ನಡೆಯಿತು.
ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಹಾಗೂ ಉಪಾಧ್ಯಕ್ಷೆ ಸ್ಥಾನ ಹಿಂದುಳಿದ ವರ್ಗ ಬಿ ಮಹಿಳೆಗೆ ಮೀಸಲಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ನಿಂದ ಮುಹಮ್ಮದ್ ಶರೀಫ್ ನಾಮಪತ್ರ ಸಲ್ಲಿಸಿದರೆ, ಉಪಾಧ್ಯಕ್ಷೆ ಸ್ಥಾನಕ್ಕೆ ಜೆಸಿಂತಾ ಡಿಸೋಜ ನಾಮಪತ್ರ ಸಲ್ಲಿಸಿದ್ದರು.
ಬಿಜೆಪಿಯಿಂದ ಅಧ್ಯಕ್ಷ ಸ್ಥಾನಕ್ಕೆ ಹಿರಿಯ ಸದಸ್ಯ ಗೋವಿಂದ ಪ್ರಭು ನಾಮಪತ್ರ ಸಲ್ಲಿಸಿದ್ದರೆ, ಉಪಾಧ್ಯಕ್ಷೆ ಸ್ಥಾನಕ್ಕೆ ಮೀನಾಕ್ಷಿ ಗೌಡ ಅವರು ನಾಮಪತ್ರ ಸಲ್ಲಿಸಿದ್ದರು. ಎಸ್.ಡಿ.ಪಿ.ಐ.ಯಿಂದ ಅಧ್ಯಕ್ಷ ಸ್ಥಾನಕ್ಕೆ ಮುನೀಶ್ ಅಲಿ ನಾಮಪತ್ರ ಸಲ್ಲಿಸಿದರು. ಮೀಸಲಾತಿ ಪ್ರಕಾರ ಉಪಾಧ್ಯಕ್ಷೆ ಸ್ಥಾನಕ್ಕೆ ಬೇಕಾದ ಅರ್ಹ ಅಭ್ಯರ್ಥಿ ಎಸ್.ಡಿ.ಪಿ.ಐ. ಬಳಿ ಇರಲಿಲ್ಲ.
ಕಾಂಗ್ರೆಸ್ ನ 12 ಸದಸ್ಯರು ಮತ್ತು ಎಸ್.ಡಿ.ಪಿ.ಐ.ಯ 4 ಸದಸ್ಯರು ಕಾಂಗ್ರೆಸ್ ಅಭ್ಯರ್ಥಿಗಳಾದ ಮುಹಮ್ಮದ್ ಶರೀಫ್ ಮತ್ತು ಜೆಸಿಂತಾ ಡಿಸೋಜ ಅವರಿಗೆ ಮತ ಚಲಾಯಿಸಿದರು. ಒಟ್ಟು 16 ಮತಗಳನ್ನು ಪಡೆದ ಕಾಂಗ್ರೆಸ್ ಅಭ್ಯರ್ಥಿಗಳಾದ ಮುಹಮ್ಮದ್ ಶರೀಫ್ ಮತ್ತು ಜೆಸಿಂತಾ ಡಿಸೋಜ ಅಧ್ಯಕ್ಷ, ಉಪಾಧ್ಯಕ್ಷೆಯಾಗಿ ಆಯ್ಕೆಯಾದರು.
ಬಿಜೆಪಿಯ 11 ಸದಸ್ಯರು ಹಾಗೂ ಸಂಸದ ನಳಿನ್ ಕುಮಾರ್ ಕಟೀಲು ಮತ್ತು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರ ಮತಗಳು ಸೇರಿ ಬಿಜೆಪಿ ಅಭ್ಯರ್ಥಿಗಳಾದ ಗೋವಿಂದ ಪ್ರಭು ಮತ್ತು ಮೀನಾಕ್ಷಿ ಗೌಡರಿಗೆ ಒಟ್ಟು 13 ಮತಗಳು ಚಲಾವಣೆಯಾಗಿ ಸೋಲು ಅನುಭವಿಸಿದರು.
ಚುನಾವಣಾ ಅಧಿಕಾರಿಯಾಗಿ ಬಂಟ್ವಾಳ ತಹಶಿಲ್ದಾರ್ ಎಸ್.ಆರ್.ರಶ್ಮಿ ಕರ್ತವ್ಯ ನಿರ್ವಹಿಸಿದರು.