ಬೆಂಗಳೂರು,ಜ.9- ಸಂಸದ ರಾಜಾ ಅಮರೇಶ್ವರ ನಾಯಕ ಅವರಿಗೆ ಮಹಾಮಾರಿ ಕೊರೊನಾ ಸೋಂಕು ತಗುಲಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನೆಗಡಿ, ಕೆಮ್ಮು ಕಾಣಿಸಿಕೊಂಡ ಕಾರಣ ಅವರು ಕೊರೊನಾ ತಪಾಸಣೆಗಾಗಿ ಗಂಟಲು ದ್ರವವನ್ನು ರಾಯಚೂರಿನಲ್ಲಿ ಪರೀಕ್ಷೆ ಮಾಡಿಸಿದ್ದರು. ಕೊರೊನಾ ದೃಢಪಟ್ಟಿರುವುದರಿಂದ ನಗರದ ಪೋರ್ಟಿಸ್ ಆಸ್ಪತ್ರೆಯಲ್ಲಿ ಕೋವಿಡ್-19 ಐಸೋಲೋಷನ್ ವಾರ್ಡ್‍ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
#ಸಿಎಂಗೆ ಮತ್ತೆ ಕೊರೊನಾ ಆತಂಕ:
ಸಂಸದ ರಾಜಾ ಅಮರೇಶ್ವರ ನಾಯಕ ಅವರಿಗೆ ಕೋವಿಡ್ ದೃಢಪಟ್ಟಿರುವುದರಿಂದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಹಲವು ಸಚಿವರು, ಶಾಸಕರು, ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳಿಗೀಗ ಕೊರೊನಾ ಭೀತಿ ಶುರುವಾಗಿದೆ.
ಯಾದಗಿರಿಯಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಸಂಸದ ರಾಜಾ ಅಮರೇಶ್ವರ ನಾಯಕ ಕೂಡ ಭಾಗಿಯಾಗಿದ್ದರು. ಈಗ ಅವರಿಗೆ ಕೊರೊನಾ ಸೋಂಕು ತಗುಲಿರುವುದರಿಂದ ಆತಂಕ ಎದುರಾಗಿದೆ.