ಬೆಂಗಳೂರು,ಜ.12-ಕೇಂದ್ರ ವರಿಷ್ಠರ ಕೆಂಗಣ್ಣಿಗೆ ಗುರಿಯಾಗಿದ್ದ ಅಬಕಾರಿ ಸಚಿವ ಎಚ್.ನಾಗೇಶ್ ಸಂಪುಟದಿಂದ ಕೋಕ್ ಪಡೆಯುವುದು ಬಹುತೇಕ ಖಚಿತವಾಗಿದೆ. ಕೊನೆ ಕ್ಷಣದಲ್ಲಿ ಸಚಿವ ಸ್ಥಾನ ಉಳಿಸಿಕೊಳ್ಳುವ ಕಸರತ್ತಿನ ಮುಂದುವರೆದ ಭಾಗವಾಗಿ ನಾಗೇಶ್ ಇಂದು ಬೆಳಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಅಧಿಕೃತ ನಿವಾಸ ಕಾವೇರಿಯಲ್ಲಿ ಭೇಟಿಯಾಗಿ ತಮ್ಮನ್ನು ಸಂಪುಟದಿಂದ ಕೈಬಿಡದಂತೆ ಮನವಿ ಮಾಡಿಕೊಂಡರು.
ಎಲ್ಲವೂ ವರಿಷ್ಠರ ನಿರ್ದೇಶನದಂತೆ ನಡೆಯುತ್ತಿರುವುದರಿಂದ ನಾನು ಏನೂ ಮಾಡದ ಅಸಹಾಯಕ ಸ್ಥಿತಿಯಲ್ಲಿದ್ದೇನೆ ಎನ್ನುವ ಮೂಲಕ ಪರೋಕ್ಷವಾಗಿ ಸಂಪುಟದಿಂದ ಕೈಬಿಡಲಾಗುತ್ತದೆ ಎಂಬ ಸುಳಿವನ್ನು ಸಿಎಂ ನೀಡಿದರು. ಈ ಬೆಳವಣಿಗೆಯಿಂದ ಅಸಮಾಧಾನಗೊಂಡ ನಾಗೇಶ್, ಮಾಧ್ಯಮಗಳಿಗೆ ಪ್ರತಿಕ್ರಿಯಿಸದೆ ಕೋಪದಿಂದಲೇ ಕಾವೇರಿಯಿಂದ ನಿರ್ಗಮಿಸಿದರು.
ಮೂಲಗಳ ಪ್ರಕಾರ ನಾಗೇಶ್ ಸಂಪುಟದಿಂದ ನಿರ್ಗಮಿಸುವುದು ಬಹುತೇಕ ಖಚಿತವಾಗಿದ್ದು, ಯಾವುದೇ ಕ್ಷಣದಲ್ಲಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ. ಸರ್ಕಾರ ರಚನೆಯಾಗುವ ಸಂದರ್ಭದಲ್ಲಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿಗೆ ಬೆಂಬಲ ಕೊಟ್ಟಿದ್ದಾರೆ.
ಸಂಪುಟದಿಂದ ಕೈಬಿಟ್ಟರೆ ತಪ್ಪು ಸಂದೇಶ ರವಾನೆಯಾಗುತ್ತದೆ ಎಂದು ದೆಹಲಿ ವರಿಷ್ಠರಿಗೆ ಬಿಎಸ್ವೈ ಮನವರಿಕೆ ಮಾಡಿಕೊಡುವ ಪ್ರಯತ್ನ ನಡೆಸಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ತಕ್ಷಣವೇ ಅವರನ್ನು ಸಂಪುಟದಿಂದ ಕೈಬಿಡಬೇಕೆಂದು ಸೂಚನೆ ನೀಡಲಾಗಿತ್ತು. ಕೋಲಾರ ಜಿಲ್ಲೆ ಮುಳಬಾಗಿಲು ಮೀಸಲು ವಿಧಾನಸಭಾ ಕ್ಷೇತ್ರದಿಂದ 2018ರ ವಿಧಾನಸಭೆ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಾಗೇಶ್ ವಿಜೇತರಾಗಿದ್ದರು.
ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಅವರನ್ನು ಮಂತ್ರಿ ಮಾಡಲಾಗಿತ್ತು. ಯಾವಾಗ ಸಮ್ಮಿಶ್ರ ಸರ್ಕಾರ ಪತನಗೊಳ್ಳುವ ಮುನ್ಸೂಚನೆ ಸಿಕ್ಕಿತ್ತೋ ನಾಗೇಶ್ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬಿಜೆಪಿಗೆ ಬೆಂಬಲ ಸೂಚಿಸಿದ್ದರು.
ರಾಜ್ಯದಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ನಾಗೇಶ್ ಅವರಿಗೆ ಅಬಕಾರಿ ಖಾತೆ ನೀಡಲಾಗಿತ್ತು.