ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯೂ ಒಳಗೊಂಡು ರಾಜ್ಯದ ಕರಾವಳಿಗೆ ಪ್ರತ್ಯೇಕ ಮರಳು ನೀತಿಯನ್ನು ರೂಪಿಸಿ ಶೀಘ್ರ ಜಾರಿಗೊಳಿಸಲಾಗುವುದು ಎಂದು ಗಣಿ ಹಾಗೂ ಭೂ ವಿಜ್ಞಾನ ಸಚಿವ ಸಿ.ಸಿ.ಪಾಟೀಲ್ ತಿಳಿಸಿದ್ದಾರೆ.
ಅವರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜನಪ್ರತಿನಿಧಿಗಳು ಮತ್ತು ಹಿರಿಯ ಅಧಿಕಾರಿಗಳ ಸಭೆಯನ್ನು ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದರು.
ರಾಜ್ಯದ ಇತರ ಜಿಲ್ಲೆಗಳಲ್ಲಿ ಮರಳುಗಾರಿಕೆ ಕುರಿತು ದೊಡ್ಡ ಸಮಸ್ಯೆ ಇಲ್ಲ. ಕರಾವಳಿಗೆ ಪ್ರತ್ಯೇಕ ಮರಳು ನೀತಿ ಬೇಕೆಂಬುದು ಜನ ಪ್ರತಿನಿಧಿಗಳ ಒತ್ತಾಯವಾಗಿದೆ. ಸರ್ವೋಚ್ಚ ನ್ಯಾಯಾಲಯ, ಹಸಿರು ಪೀಠದ ತೀರ್ಪುಗಳು ಮತ್ತು ಕಾನೂನಿನ ವಿಷಯಗಳನ್ನು ಮನನ ಮಾಡಿಕೊಂಡು ನೂತನ ನೀತಿಯನ್ನು ರೂಪಿಸಲಾಗುವುದು ಎಂದು ಸಚಿವರು ಸ್ಪಷ್ಟ ಪಡಿಸಿದರು.
ಪಟ್ಟಾ ಜಮೀನಿನಲ್ಲಿ ಕೆಂಪು ಕಲ್ಲು ಗಣಿಗಾರಿಕೆಗೆ ನಡೆಸಲು 250 ಮಂದಿ ಅರ್ಜಿ ಸಲ್ಲಿಸಿದ್ದಾರೆ. ಬಾಕ್ಸೈಟ್ ಗಣಿಗಾರಿಕೆಗೆ ಅವಕಾಶ ಇಲ್ಲ. ಸರಕಾರಿ ಜಮೀನಿನಲ್ಲಿ ಗಣಿಗಾರಿಕೆ ಇಲ್ಲ ಎಂದು ಸಚಿವರು ನುಡಿದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ಮತ್ತು ಮರಳು ಮಾಫಿಯಾವನ್ನು ಸಂಪೂರ್ಣ ಮಟ್ಟ ಹಾಕಲಾಗಿದೆ ಎಂದು ಸಂಸತ್ ಸದಸ್ಯ ನಳಿನ್ಕುಮಾರ್ ಕಟೀಲು ತಿಳಿಸಿದರು.
ಉಡುಪಿ- ದ.ಕ. ಜಿಲ್ಲೆಯ ಶಾಸಕರು, ಹಿರಿಯ ಅಧಿಕಾರಿಗಳು, ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕುಮಾರ್ ನಾಯಕ್, ನಿರ್ದೇಶಕ ಡಿ.ಎಸ್.ರಮೇಶ್ ಉಪಸ್ಥಿತರಿದ್ದರು.