ಬೆಂಗಳೂರು : ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಎಂ.ಎಸ್. ರಕ್ಷಾ ರಾಮಯ್ಯ ಚುನಾವಣೆಯಲ್ಲಿ ಆಯ್ಕೆಯಾಗಿದ್ದು, ಈ ವಿಚಾರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ರಾಷ್ಟ್ರೀಯ ಯುವ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕದ ಉಸ್ತುವಾರಿ ನೋಡಿಕೊಳ್ಳುವ ಸುರಬಿ ದ್ವಿವೇದಿ ಸ್ಪಷ್ಟವಾಗಿ ಹೇಳಿದ್ದಾರೆ.
ಕಳೆದ ಎರಡು ವಾರಗಳಿಂದ ಈ ಕುರಿತು ತಲೆದೋರಿದ್ದ ಎಲ್ಲಾ ಗೊಂದಲಗಳಿಗೆ ಸ್ಪಷ್ಟವಾಗಿ ತೆರೆ ಎಳೆದಿರುವ ಅವರು, ಎಂ.ಎಸ್. ರಕ್ಷಾ ರಾಮಯ್ಯ ಅವರು ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮುಂದುವರೆಯಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.
ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಗೊಂದಲಗಳ ಕುರಿತು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಪದಾಧಿಕಾರಿಗಳು, ಪಕ್ಷದ ನೂರಾರು ಕಾರ್ಯಕರ್ತರಿಂದ ಮಾಹಿತಿ ಕ್ರೋಢೀಕರಿಸಿದ ನಂತರ ಅವರು ಸುದ್ದಿಗಾರರ ಜತೆ ಮಾತನಾಡಿದರು.
ಪಕ್ಷದ ಆಂತರಿಕ ಸಮಸ್ಯೆಗಳನ್ನು ಪಕ್ಷದ ವೇದಿಕೆಯಲ್ಲಿಯೇ ಬಗೆಹರಿಸಿಕೊಳ್ಳುತ್ತೇವೆ.
ಬ್ಲಾಕ್ ಕಾಂಗ್ರೆಸ್ ಘಟಕದ ಚುನಾವಣೆಯಲ್ಲಿ ಸೋತವರು ನಮ್ಮವರೇ, ಗೆದ್ದವರೂ ನಮ್ಮವರೇ ಆಗಿದ್ದಾರೆ. ನಮ್ಮಲ್ಲಿನ ಗೊಂದಲಗಳನ್ನು ನಾವೇ ಬಗೆಹರಿಸಿಕೊಳ್ಳುತ್ತೇವೆ ಎಂದು ಹೇಳಿದರು.ಹಲವು ಬ್ಲಾಕ್ ಕಾಂಗ್ರೆಸ್ ಘಟಕದ ಪ್ರಮುಖರು ಚುನಾವಣೆಯಲ್ಲಿ ಪರಾಭವಗೊಂಡಿದ್ದಾರೆ. ಸೋತವರಿಗೂ ಸಹ ಪಕ್ಷದ ವಿವಿಧ ಘಟಕಗಳಲ್ಲಿ ಅವಕಾಶ ಕಲ್ಪಿಸುತ್ತೇವೆ. ಯಾರಿಗೂ ಅನ್ಯಾಯವಾಗುವುದಿಲ್ಲ. ಎಲ್ಲರಿಗೂ ನ್ಯಾಯ ದೊರಕಿಸಿಕೊಡುವ ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.