ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮತ್ತು ರಾಜ್ಯ ಸರ್ಕಾರವನ್ನು ಸತತವಾಗಿ ಟೀಕೆ ಮಾಡುತ್ತಿದ್ದ ವಿಜಯಪುರ ಶಾಸಕ, ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಗೆ ಬಿಜೆಪಿ ಹೈಕಮಾಂಡ್ ಶೋಕಾಸ್ ನೋಟಿಸ್ ಜಾರಿಗೊಳಿಸಿರುವುದಾಗಿ ಉನ್ನತ ಮೂಲಗಳು ತಿಳಿಸಿದೆ.
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿರುದ್ಧ ಅಸಮಾಧಾನಗೊಂಡಿದ್ದ ಬಸನಗೌಡ ಪಾಟೀಲ್ ಯತ್ನಾಳ್ ಪದೇ ಪದೇ ಸಿಎಂ ವಿರುದ್ಧ ಹೇಳಿಕೆಗಳನ್ನು ನೀಡುತ್ತಿದ್ದರು. ರಾಜ್ಯದಲ್ಲಿ ಸಿಎಂ ಬದಲಾವಣೆ ಮಾಡಲಾಗುತ್ತದೆ, ಉತ್ತರ ಕರ್ನಾಟಕದವರು ಮುಂದಿನ ಸಿಎಂ ಆಗುತ್ತಾರೆ ಎಂಬಿತ್ಯಾದಿ ಹೇಳಿಕೆ ನೀಡಿ ಸರ್ಕಾರಕ್ಕೆ ಮತ್ತು ಪಕ್ಷಕ್ಕೆ ಮುಜುಗರ ಉಂಟು ಮಾಡಿದ್ದರು.
ಸಚಿವ ಸಂಪುಟ ವಿಸ್ತರಣೆಯ ವೇಳೆ ಅಸಮಾಧಾನಗೊಂಡಿದ್ದ ಯತ್ನಾಳ್ ‘ಸಿಡಿ’ ಬಾಂಬ್ ಹಾಕಿದ್ದರು.
ಇದು ರಾಜ್ಯ ರಾಜಕೀಯದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿತ್ತು.
ಬೆಳಗಾವಿಯಲ್ಲಿ ನಡೆದ ರಾಜ್ಯ ಕಾರ್ಯಕಾರಣಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಯತ್ನಾಳ್ ವಿರುದ್ಧ ಶಿಸ್ತು ಸಮಿತಿಗೆ ಶಿಫಾರಸ್ಸು ಮಾಡಿದ್ದರು. ಇದೀಗ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ಶೋಕಾಸ್ ನೀಡಿದ್ದಾರೆ.